ಬೆಂಗಳೂರು, ಜುಲೈ, 2,2025 (www.justkannada.in): ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತನ್ನು ರದ್ದುಗೊಳಿಸಿದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ಹೊರಡಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ಸಿಎಟಿ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ ಸರ್ಕಾರದ ಪರ ಎಜಿ ಶಶಿಕಿರಣ್ ಶೆಟ್ಟಿ, ತುರ್ತು ವಿಚಾರಣೆಗೆ ಮನವಿ ಮಾಡಿದರು.
ಕರ್ನಾಟಕ ಸರ್ಕಾರದ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜಿ ಶಶಿಕಿರಣ್ ಶೆಟ್ಟಿ, ಸಿಎಟಿ ಆದೇಶದ ಕಾರಣ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ಮುಂದಾಗಿದ್ದಾರೆ. ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಬಳಿಕ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನ ನಾಳೆಗೆ ನಿಗದಿ ಮಾಡಿದೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ್ದ ಕಾಲ್ತುಳಿತದ ನಂತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದ ಸರ್ಕಾರ, ಆಗಿನ ಪೊಲೀಸ್ ಆಯಕ್ತ ಬಿ ದಯಾನಂದ್, ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು. ಇದರ ವಿರುದ್ಧ ವಿಕಾಸ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮೊರೆ ಹೋಗಿದ್ದರು.
ವಿಕಾಸ್ ಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯು ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರ ಅಮಾನತು ಆದೇಶವನ್ನ ರದ್ದುಪಡಿಸಿತ್ತು.
Key words: Stampede case, Government, High Court, CAT, order
The post ಕಾಲ್ತುಳಿತ ಕೇಸ್: CAT ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಸರ್ಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.