ಮಂಡ್ಯ,ಜೂನ್,25,2025 (www.justkannada.in): ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿದೆ.
ಕೆಆರ್ ಎಸ್ ಜಲಾಶಯದಿಂದ ಸುಮಾರು 30,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ ನೀಡಲಾಗಿದೆ.
ಕೆ.ಆರ್.ಎಸ್. ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಆತಂಕ ಹಿನ್ನೆಲೆಯಲ್ಲಿ ಜನರು ನದಿ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಬ ದೇವಸ್ಥಾನ, ಘೋಸಾಯ್ ಘಾಟ್ ಪ್ರದೇಶಗಳಿಗೆ ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.
ನದಿ ತೀರದ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.
Key words: flood threat, Restrictions, tourist, Cauvery river, KRS
The post ಭಾರಿ ಮಳೆ, ಪ್ರವಾಹ ಭೀತಿ: ಕಾವೇರಿ ನದಿ ಪಾತ್ರದ ಪ್ರವಾಸಿ ತಾಣಗಳಿಗೆ ನಿರ್ಬಂಧ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.