ಮೈಸೂರು,ಜುಲೈ,11,2025 (www.justkannada.in): ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೆ ಪದೇ ಮಾತನಾಡುವುದು ಸರಿ ಇಲ್ಲ ಎಂದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಸಕಾಲಕ್ಕೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ
ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.
Key words: Chamundi Hills, Minister, Lakshmi Hebbalkar, no revolution
The post ರಾಜ್ಯ ರಾಜಕಾರಣದಲ್ಲಿ ಯಾವುದೇ ಕ್ರಾಂತಿ ಇಲ್ಲ, ಎಲ್ಲವೂ ಶಾಂತಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.