ಬೆಂಗಳೂರು,ಏಪ್ರಿಲ್,16,2025 (www.justkannada.in) : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ದ ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿ ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ.
ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವ ಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ ಎಂದು ತಿಳಿಸಿದ್ದಾರೆ.
ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
Key words: Charge sheet, Rahul Gandhi, Sonia Gandhi, politics, CM, Siddaramaiah
The post ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ದ ಚಾರ್ಜ್ ಶೀಟ್: ಇದು ಸೇಡಿನ ರಾಜಕಾರಣದ ಮುಂದುವರೆದ ಭಾಗ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.