ಬೆಂಗಳೂರು,ಮೇ,9,2025 (www.justkannada.in): ಶಿವಮೊಗ್ಗ ಜಿಲ್ಲೆಯ ಶರಾವತಿ ಹಾಗೂ ಇನ್ನಿತರೆ ಯೋಜನೆ ಮುಳುಗಡೆ ಸಂತ್ರಸ್ತರ ಹಾಗೂ ಅರಣ್ಯವಾಸಿಗಳ ಅರಣ್ಯ ಹಕ್ಕು ಹಾಗೂ ಭೂ ಕಂದಾಯ ಹಕ್ಕಿಗೆ ಸಂಬಧಿಸಿದಂತೆ ಪರಿಹಾರಗಳ ಕುರಿತುಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ಜಿಲ್ಲೆಯ ಅರಣ್ಯವಾಸಿಗಳು ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕೈಗೊಳ್ಳುವುದಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಭರವಸೆ ನೀಡಿದರು.
ಎಸ್. ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾ ನಾಯಕ್, ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಹಿರಿಯ ವಕೀಲ ರಮೇಶ್ ಹೆಗ್ಡೆ, ಜಯಂತ್, ಶೇಖರ್ ಸೇರಿದಂತೆ ಕಂದಾಯ ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಪಾಲ್ಗೊಂಡರು.
ಸಭೆಯಲ್ಲಿ ಪ್ರಮುಖವಾಗಿ ಶಿವಮೊಗ್ಗ ಜಿಲ್ಲೆಯಲ್ಲಿನ ಸೊಪ್ಪಿನ ಬೆಟ್ಟ ಹಾಗೂ ಕಾನು ಭೂಮಿಗಳ ಅನಧೀಕೃತ ಸಾಗುವಳಿ ಸಕ್ರಮಗೊಳಿಸುವಿಕೆ, ಹಂಗಾಮಿ ಮನೆಗಳ ಪತ್ರಗಳನ್ನು ಖಾಯಂಗೊಳಿಸುವುದು, ಕಂದಾಯ ದಾಖಲೆಗಳಲ್ಲಿ ತಪ್ಪಾಗಿ ನಮೂದಿಸಲಾಗಿರುವ ಸೂಚಿತ ಅರಣ್ಯ (ಪಿಎಫ್) ಎಂಬ ಉಲ್ಲೇಖವನ್ನು ಕೈಬಿಡುವುದು, ಕರ್ನಾಟಕ ಅರಣ್ಯ ಕಾಯ್ದೆ 1963 ರ ಸೆಕ್ಷನ್ 4 ರ ಅಡಿಯಲ್ಲಿ ಮೀಸಲು ಅರಣ್ಯದ ಅಂತಿಮ ಅಧಿಸೂಚನೆಗೆ ಕಾಲಮಿತಿ ನಿಗದಿಪಡಿಸುವುದು ಮತ್ತು ಅನುಮೋದನೆ ನೀಡುವುದು, ಮೈಸೂರು ಸರ್ಕಾರದಿಂದ ನೀಡಲಾದ ಹಕ್ಕುಪತ್ರಗಳಿಗೆ ಇ-ಸ್ವತ್ತು ದಾಖಲೆ ಸೃಜಿಸುವುದು, ಸರ್ಕಾರದ ವಿವಿಧ ನೀರಾವರಿ ಹಾಗೂ ವಿದ್ಯುತ್ ಯೋಜನೆಗಳ ಮುಳುಗಡೆ ಸಂತ್ರಸ್ತರ ಪುನರ್ವಸತಿ ಜಮೀನುಗಳನ್ನು ಅರಣ್ಯ ಭೂಮಿ ಇಂಡೀಕರಣ ಪ್ರಸ್ತಾವನೆಯಿಂದ ಕೈಬಿಡುವುದು, 27.04.1978 ರ ಪೂರ್ವದ ಮೂರು ಎಕರೆ ಅರಣ್ಯ ಭೂಮಿಯನ್ನು ಸಕ್ರಮಗೊಳಿಸುವುದು ಮತ್ತು ಅರಣ್ಯ ಹಕ್ಕು ಮಾನ್ಯತಾ ಕಾಯ್ದೆ 2006 ರ ಅಡಿಯಲ್ಲಿ ಅರಣ್ಯ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.
ಜೊತೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ವಾರಾಹಿ, ಚಕ್ರ, ಸಾವೆಹಕ್ಲು, ಭದ್ರ, ತುಂಗ ಹಾಗೂ ಇನ್ನಿತರೆ ವಿದ್ಯುತ್ ಮತ್ತು ನೀರಾವರಿ ಯೋಜನೆಗಳ ಮುಳುಗಡೆ ಸಂತ್ರಸ್ತರ ಭೂ ಹಕ್ಕಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ 0.05 ಗುಂಟೆ ಒಳಗಿನ ವಿಸ್ತೀರ್ಣದ ರೆವಿನ್ಯೂ ನಿವೇಶನವನ್ನು ಭೂ ಪರಿವರ್ತನೆ ಮಾಡುವ ಕುರಿತು ಸಭೆಯಲ್ಲಿ ಗಮನ ಸೆಳೆಯಲಾಯಿತು.
ಈ ಎಲ್ಲಾ ವಿಚಾರಗಳ ಬಗ್ಗೆ ಸರ್ಕಾರವು ಅಗತ್ಯ ಕ್ರಮ ಕೈಗೊಂಡು, ಅರಣ್ಯ ಮತ್ತು ಕಂದಾಯ ಭೂ ಹಕ್ಕಿನ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುವಂತೆ ಸಚಿವರು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದರು.
ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದಾರೆ. ಈ ಮೂಲಕ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಶಿವಮೊಗ್ಗ ಜಿಲ್ಲೆಯ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯವಾಸಿಗಳ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ಆಶಾಭಾವನೆ ಮೂಡಿದೆ.
Key words: problems, forest dwellers, drowning, victims, Shivamogga district, Meeting
The post ಶಿವಮೊಗ್ಗ ಜಿಲ್ಲೆ ಅರಣ್ಯವಾಸಿಗಳು, ಮುಳುಗಡೆ ಸಂತ್ರಸ್ತರ ಸಮಸ್ಯೆಗಳಿಗೆ ಶೀಘ್ರ ಪರಿಹಾರದ ಭರವಸೆ ನೀಡಿದ ಮುಖ್ಯ ಕಾರ್ಯದರ್ಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.