ಬೆಂಗಳೂರು ಮೇ 29,2025 (www.justkannada.in): ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಪ್ರತಿಭೆಯೂ ಹೊರಗೆ ಬರುತ್ತದೆ. ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗುತ್ತೇವೆ ಎಂದರು.
ಡಾ.ಬಾಬಾ ಸಾಹೇಬರು ದೇಶ ಕಂಡ ಮಹಾನ್ ವಿದ್ವಾಂಸರಲ್ಲಿ ಒಬ್ಬರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕರೆ ಎಲ್ಲರ ಒಳಗಿರುವ ಪ್ರತಿಭೆಯೂ ಹೊರಗೆ ಬರುತ್ತದೆ. ಅಂಬೇಡ್ಕರ್ ಅವರು ಕೊಟ್ಟಂತಹ ಸಂವಿಧಾನವನ್ನೂ ಎಲ್ಲರೂ ಪಾಲಿಸಬೇಕು. ಜಾತಿ, ವರ್ಗ ಮುಕ್ತ ಸಮ ಸಮಾಜ ನಿರ್ಮಾಣ ಆಗಬೇಕು ಎನ್ನುವುದು ಅಂಬೇಡ್ಕರ್ ಅವರ ಆಶಯವಾಗಿತ್ತು ಎಂದರು.
ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರ ನೇಮಕ ಮಾಡಲು ಅನುಮೋದಿಸಿದ್ದೆ
1992-93 ರಲ್ಲಿ ನಾನು ಹಣಕಾಸು ಮಂತ್ರಿಯಾಗಿದ್ದಾಗ ಒಂದು ಲಕ್ಷ ಶಿಕ್ಷಕರನ್ನು ನೇಮಕ ಮಾಡಲು ಹಣಕಾಸು ಅನುಮೋದನೆ ನೀಡಿದ್ದೆ ಎಂದು ಸ್ಮರಿಸಿದರು.
ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ಸಿಕ್ಕರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ಓದಲು ಸಾಧ್ಯ. ಈ ಕಾರಣಕ್ಕೇ ನಾವು ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ, ಹಾಲು ಕೊಡುತ್ತಿದ್ದೇವೆ. ಇದರ ಜೊತೆಗೆ ಪಠ್ಯ, ಸಮವಸ್ತ್ರ, ಶೂ, ಸಾಕ್ಸ್, ಪುಸ್ತಕಗಳನ್ನೂ ಸರ್ಕಾರದಿಂದಲೇ ಕೊಡುತ್ತಿದ್ದೇವೆ ಎಂದರು.
ಹೆಚ್ಚೆಚ್ಚು ಭಾಷೆ ಕಲಿಯಿರಿ: ಕನ್ನಡದಲ್ಲಿ ಮುಂದಿರಿ
ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ. ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾದಂತೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಿ ಹೇಳಿದರು.
ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ 725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಕರೆ ನೀಡಿದರು.
Key words: best, education, government schools, CM, Siddaramaiah
The post ಸರ್ಕಾರಿ ಶಾಲೆಗಳಲ್ಲೂ ಅತ್ಯುತ್ತಮ ಶಿಕ್ಷಣ ನಮ್ಮ ಗುರಿ: ಹೆಚ್ಚೆಚ್ಚು ಭಾಷೆ ಕಲಿಯಿರಿ, ಕನ್ನಡದಲ್ಲಿ ಮುಂದಿರಿ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.