ಬೆಂಗಳೂರು,ಜೂನ್,20,2025 (www.justkannada.in): ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ನಿನ್ನೆ ವಸತಿ ಇಲಾಖೆಯಡಿ ಅಲ್ಪಸಂಖ್ಯಾತರಿಗೆ ಶೇ 10ರಷ್ಟಿದ್ದ ಮೀಸಲಾತಿಯನ್ನು ಶೇ 15ಕ್ಕೆ ಏರಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಡೆದು ಆಳುವ ನೀತಿಯನ್ನ ಅನುಸರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನರೇ ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಶಾಸಕಬಿ.ಆರ್.ಪಾಟೀಲ್ ರಿಂದ ಲಂಚ ಆರೋಪದ ಆಡಿಯೋ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಹೈಕಮಾಂಡಿನ ಎಟಿಎಂ ಆಗಿ ಬದಲಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ 40% ಕಮಿಷನ್ ಎಂದು ಆರೋಪ ಮಾಡಿದ್ದರು. ಈಗ ಅವರದ್ದೇ ಸರ್ಕಾರದ, ಪಕ್ಷದ ಶಾಸಕರೇ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಚಾರ ತಾಂಡವವಾಡುತ್ತಿದೆ ಎಂದು ಹರಿಹಾಯ್ದರು.
ಹಾಗೆಯೇ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಹೋರಾಟ ತೀವ್ರಗೊಳಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೂಚಿಸಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ತಿಳಿಸಿದರು.
Key words: CM Siddaramaiah, Tughlaq Darbar, BY Vijayendra
The post ಸಿಎಂ ಸಿದ್ದರಾಮಯ್ಯರಿಂದ ತುಘಲಕ್ ದರ್ಬಾರ್ –ಬಿವೈ ವಿಜಯೇಂದ್ರ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.