ಬೆಂಗಳೂರು, ಜುಲೈ 24,2025 (www.justkannada.in): ಆಸ್ಪತ್ರೆ, ಕಾಲೇಜು ಸೇರಿ ಬಹುಮಹಡಿ ಕಟ್ಟಡಗಳಿಗೆ 1% ‘ಸೆಸ್’ ವಿಧಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ ಪಾಟೀಲ್, ಅಗ್ನಿಶಾಮಕ ದಳದ ಕಾಯ್ದೆ ಅನ್ವಯವಾಗುವ ಬಹುಮಹಡಿ ಕಟ್ಟಡಗಳಿಗೆ 1 % ಸೆಸ್ ವಿಧಿಸಲು ನಿರ್ಧರಿಸಲಾಗಿದೆ. ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆ ಕಟ್ಟಡಗಳು, ಅಪಾರ್ಟ್ಮೆಂಟ್ಗಳು ಸೇರಿ ಎತ್ತರದ ಬಹುಮಹಡಿ ಕಟ್ಟಡಗಳಿಗೆ ಸೆಸ್ ವಿಧಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ 10 ಕೋಟಿ ರೂ. ಅಂದಾಜು ಮೊತ್ತದಲ್ಲಿ ಸ್ಪೇಸ್‌ಟೆಕ್ ಕೇಂದ್ರ ಸ್ಥಾಪಿಸುವ ಪ್ರಸ್ತಾವಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಕರ್ನಾಟಕ ಜಾಗತಿಕ ಸಾಮರ್ಥ್ಯ ಕೇಂದ್ರ ನೀತಿ 2024-29 ತಿದ್ದುಪಡಿ ಮಾಡಲು ಅನುಮೋದನೆ ನೀಡಲಾಗಿದೆ. ರಾಯಚೂರಿನಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪರಿಫೆರಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿಯನ್ನು ಅಂಗೀಕರಿಸಲಾಗಿದ್ದು, ಘಟನೆಗೆ ಸಂಬಂಧಿಸಿದ ಖಾಸಗಿ ಸಂಸ್ಥೆ ವಿರುದ್ದ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸಂಬಂಧಿಸಿದ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆಗೆ ನಿರ್ಧಾರ ಮಾಡಲಾಗಿದೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.
Key words: Cabinet meeting, decisions, 1% cess, multi-storey buildings
The post ಕ್ಯಾಬಿನೆಟ್ ಮೀಟಿಂಗ್: ಬಹುಮಹಡಿ ಕಟ್ಟಡಗಳಿಗೆ 1% ಸೆಸ್ ಸೇರಿ ಹಲವು ಮಹತ್ವದ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.