ಮೈಸೂರು,ಜುಲೈ,12,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಿರುವ ‘ಸರ್ಕಾರದ ಸಾಧನೆಗಳ ಸಮಾವೇಶ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆಯ’ ಬೃಹತ್ ಕಾರ್ಯಕ್ರಮ ಸಂಬಂಧ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಶನಿವಾರ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ, ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿವರ್ಗದವರು ಹಾಗೂ ಮುಖಂಡರೊಡನೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿದ ಬಳಿಕ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ಆಯೋಜಿಸಬೇಕು. ಸುಸಜ್ಜಿತ ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆಯನ್ನು ಬಹಳ ವ್ಯವಸ್ಥಿತವಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಚಾರದಂತೆ ಆಸನ ವ್ಯವಸ್ಥೆ ಮಾಡುವುದು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್ ಗಳ ನಿರ್ಮಾಣ ಮಾಡಿಕೊಳ್ಳುವುದು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸಿದ್ದತೆಯನ್ನು ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಸಾವಿರಾರು ಸಂಖ್ಯೆಯಲ್ಲಿ ಬರುವ ಸಾರ್ವಜನಿಕರಿಗೆ ಕಾರ್ಯಕ್ರಮದಲ್ಲಿ ಯಾವುದೇ ಕಿರಿಕಿರಿ ಉಂಟಾಗಬಾರದು. ಇದು ಸರ್ಕಾರದ ಬೃಹತ್ ಸಮಾರಂಭವಾಗಿದ್ದು, ಪಾಲ್ಗೊಳ್ಳುವ ಎಲ್ಲರಿಗೂ ಕುಡಿಯುವ ನೀರು, ಶೌಚಾಲಯ, ಊಟ ಮತ್ತು ಸಾರಿಗೆ ವ್ಯವಸ್ಥೆಯನ್ನು ಸಮರ್ಪಕವಾಗಿ ಕೈಗೊಂಡು, ಯಾವುದಕ್ಕೂ ಕೊರತೆ ಉಂಟಾಗದಂತೆ ಸಮಾರಂಭ ನಡೆಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಹೀಗಾಗಿ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರೆಲ್ಲರೂ ಸಮಾರಂಭಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಇದಕ್ಕೆ ಸಭೆಗೆ ಆಗಮಿಸಿದ್ದ ಎಲ್ಲರೂ ಸಹಮತ ವ್ಯಕ್ತಪಡಿಸಿದರು.
ಸಭೆಯಲ್ಲಿ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕರಾದ ಎಚ್.ಪಿ.ಮಂಜುನಾಥ್, ಎಂ.ಕೆ.ಸೋಮಶೇಖರ್, ಆರ್.ನರೇಂದ್ರ, ಸುನೀತ ವೀರಪ್ಪಗೌಡ, ಕಳಲೆ ಕೇಶವಮೂರ್ತಿ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಆಯೂಬ್ ಖಾನ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಕ್ ತನ್ವೀರ್ ಆಷೀಫ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಜೆ.ವಿಜಯಕುಮಾರ್, ಆರ್.ಮೂರ್ತಿ ಅವರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
Key words: Mysore, Government Achievement, Conference, July 19, Minister, HC Mahadevappa
The post ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.