ಬೆಂಗಳೂರು,ಮೇ,22,2025 (www.justkannada.in): ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ನ ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಕರವೇ ನಾರಾಯಣಗೌಡ, ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ.
ಮೈಸೂರು ಸೋಪ್ಸ್ ಸಂಸ್ಥೆ ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದರು. ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ? ಎಂದು ಪ್ರಶ್ನಿಸಿದ್ದಾರೆ.
ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವನ್ನು ಈ ಮೂಲಕ ದಾಖಲಿಸುತ್ತೇವೆ. ತಮನ್ನಾ ಭಾಟಿಯಾ ಅವರನ್ನು ನೇಮಿಸಲು ಸರ್ಕಾರವು 6.20 ಕೋಟಿ ರೂಪಾಯಿಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ.
ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ನಾರಾಯಣಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಸರ್ಕಾರ ಕೂಡಲೇ ತಮನ್ನಾ ಭಾಟಿಯಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ತಮನ್ನಾ ಆಯ್ಕೆ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
Key words: actress Tamannaah, KSDL, ambassador, Karave, Narayana Gowda , outraged
The post KSDL ರಾಯಭಾರಿಯಾಗಿ ಪರಭಾಷಾ ನಟಿ ತಮನ್ನಾ ಆಯ್ಕೆ: ಕರವೇ ನಾರಾಯಣಗೌಡ ತೀವ್ರ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.