ಬೆಂಗಳೂರು,ಜುಲೈ,11,2025 (www.justkannada.in): ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ಆದಷ್ಟು ಬೇಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಲಾಗುವುದು. ಅದಾದ ಮೇಲೆ ಈ ವಿಚಾರವು ಕೇಂದ್ರ ಸಂಪುಟದ ಮುಂದೆ ಬರಬೇಕಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ ಅವರು, `ಇಸ್ರೇಲ್-ಇರಾನ್, ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಜಾಗತಿಕ ರಾಜಕೀಯ ಪರಿಸ್ಥಿತಿಯಲ್ಲಿನ ಬದಲಾವಣೆಗಳಿಂದಾಗಿ ಮುಂದಿನ 20 ವರ್ಷಗಳ ಕಾಲ ರಕ್ಷಣಾ ಉದ್ಯಮ, ಏರೋಸ್ಪೇಸ್, ಸೆಮಿಕಂಡಕ್ಟರ್, ಎಐ ಮುಂತಾದ ಡೀಪ್-ಟೆಕ್ ಆಧಾರಿತ ಉದ್ಯಮಗಳಿಗೆ ಬೇಡಿಕೆ ಇರಲಿದೆ. ನ್ವಿಡಿಯಾ ಕಂಪನಿ ಈ ವಲಯದಲ್ಲಿ 4 ಟ್ರಿಲಿಯನ್ ಡಾಲರ್ ವಹಿವಾಟು ದಾಖಲಿಸಿರುವ ಪ್ರಪ್ರಥಮ ಕಂಪನಿಯಾಗಿ ಹೊರಹೊಮ್ಮಿದೆ. ಇದನ್ನು ನಾವು ಸದವಕಾಶವಾಗಿ ಬಳಸಿಕೊಳ್ಳಲು ಕರ್ನಾಟಕವನ್ನು ಸಜ್ಜುಗೊಳಿಸಬೇಕಾದ ಜರೂರಿದೆ’ ಎಂದಿದ್ದಾರೆ.
ದೇವನಹಳ್ಳಿ ಸಮೀಪ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ಭೂಮಿ ಬೇಕಾಗಿದೆ. ಆದರೆ ರೈತರು ಭೂಸ್ವಾಧೀನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 15ರಂದು ಸಭೆ ಕರೆದಿದ್ದಾರೆ. ಸರಕಾರವೇನಾದರೂ ಭೂಸ್ವಾಧೀನ ಮಾಡಿಕೊಂಡರೆ ರೈತರಿಗೆ ಸರಿಯಾದ ಪರಿಹಾರ ಕೊಡಬೇಕೆನ್ನುವುದು ನಮ್ಮ ಕಳಕಳಿಯಾಗಿದೆ. ಏಕೆಂದರೆ, ರೈತರು ಕೂಡ ನಮ್ಮವರೇ ಆಗಿದ್ದಾರೆ ಎಂದು ಅವರು ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಎರಡನೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನ ಸಚಿವರನ್ನು ಮುಂದಿನ ವಾರ ದೆಹಲಿಗೆ ಹೋಗಿ ಭೇಟಿಯಾಗಿ, ಮಾತುಕತೆ ನಡೆಸಲಾಗುವುದು. ನೋಯಿಡಾ, ನವೀ ಮುಂಬೈ ನೂತನ ವಿಮಾನ ನಿಲ್ದಾಣಗಳ ಅಭಿವೃದ್ಧಿಯನ್ನು ವಿಸ್ತೃತವಾಗಿ ಗಮನಿಸಿ, ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಸಿಎಂ ಕುರ್ಚಿ, ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಖಾಲಿ ಇಲ್ಲ
ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಾಗಲಿ, ಕೆಪಿಸಿಸಿ ಅಧ್ಯಕ್ಷರ ಹುದ್ದೆಯಾಗಲಿ ಖಾಲಿ ಇಲ್ಲ. ಆದ್ದರಿಂದ ಈ ಬಗ್ಗೆ ಯಾರೂ ಮಾತನಾಡಬೇಕಾದ ಅಗತ್ಯವಿಲ್ಲ. ಕಾಂಗ್ರೆಸ್ಸಿನಲ್ಲಿ ಹೈಕಮಾಂಡೇ ಪರಮೋಚ್ಚ. ಅದು ಹೇಳುವ ಮಾತೇ ಅಂತಿಮ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಎಂ.ಬಿ ಪಾಟೀಲ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
Key words: Defence Corridor, Meet, PM, soon, Minister, M. B. Patil
The post ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.